* ರಾಷ್ಟ್ರಕವಿ ಕುವೆಂಪು ರವರ ಜನ್ಮದಿನವಾದ ಡಿಸೇಂಬರ್ 29 ರಂದು ಪ್ರತಿವರ್ಷ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ. ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904 ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಹಾಗೂ ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
* ಕುವೆಂಪು ರವರು ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರು ನಂತರ ಉಪಕುಲಪತಿಗಳಾದರು ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
* ಕುವೆಂಪು ರವರು ರಚಿಸಿದ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ (1949) ಹಾಗೂ ಖಂಡಕಾವ್ಯಗಳು ಚಿತ್ರಾಂಗದಾ (1936) ಆಗಿದೆ. ಕುವೆಂಪು ರವರು ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು.
* ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ ಇವರಾಗಿದ್ದರು. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.